ನಾಳೆ ಅತಿಥಿ ಉಪನ್ಯಾಸಕರ ಪ್ರತಿಭಟನೆ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಸೇವಾ ಹಿರಿತನದ ಆಧಾರದ ಮೇಲೆ ನೇಮಕ ಮಾಡಬೇಕೆಂದು, ಅತಿಥಿ ಉಪನ್ಯಾಸಕರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಯೋಗ ರಚಿಸಬೇಕು, ಹೀಗೆ ನಾನಾ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಆ.30ರಂದು ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಎಸ್.ನಾಗರಾಜು ಹೇಳಿದರು.
ಅಂದು ಬೆಳಗ್ಗೆ 11ಕ್ಕೆ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಪೊಲೀಸ್ ಆಯುಕ್ತರ ಕಚೇರಿ ಮಾರ್ಗವಾಗಿ ಡಯಟ್, ಗೋಪಾಲಗೌಡ ಆಸ್ಪತ್ರೆಘಿ, ಹಳೆ ಹಾಲಿನ ಡೈರಿ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ, ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಗುವುದು . ರೈತ, ದಲಿತ, ಕನ್ನಡಪರ, ಪ್ರಗತಿಪರ,ವಿದ್ಯಾರ್ಥಿ ಸಂಘಟನೆಗಳು ಇತರೆ ಜನಪರ ಸಂಘಟನೆಗಳ ಸಹಿಭಾಗಿತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 10ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯುಜಿಸಿ ಮತ್ತು ನಾನ್ ಯುಜಿಸಿ ಎಂಬ ಗೊಂದಲದಿಂದಾಗಿ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಸ್ಥಗಿತಗೊಂಡಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದೆ. ಅಲ್ಲದೇ, ಅತಿಥಿ ಉಪನ್ಯಾಸಕರು ಬದುಕು ಅತಂತ್ರ ಸ್ಥಿತಿಯಾಗಿದೆ.ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಕಾಲೇಜು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿ, ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಮಹಿಳಾ ಸಂಯೋಜಕಿ ಹರ್ಷಿತಾ, ಮಂಗಳೂರು-ಉಡುಪಿ ವಿಭಾಗೀಯ ಕಾರ್ಯದರ್ಶಿ ಆರ್.ವಿನಯ ಕುಮಾರ, ಬೆಂಗಳೂರು ನಗರಾಧ್ಯಕ್ಷೆ ಆರ್.ಪೂರ್ಣಿಮ, ಮೈಸೂರು ಜಿಲ್ಲಾ ಉಪಾಧ್ಯಕ್ಷ ಎಚ್.ಎಂ.ಮಹೇಶ್ ಇದ್ದರು.

Share This Article
Leave a Comment