ಪಬ್ಲಿಕ್ ಅಲರ್ಟ್ ನ್ಯೂಸ್:-ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ಕ್ರೀಡಾಕೂಟ
ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಮೇಲ್ವಿಚಾರಕರಿಗಾಗಿ ಇಂದು ಕ್ರೀಡಾಕೂಟವನ್ನು ಆಯೋಜಿಸಲಾಯಿತು.
ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಎಂ.ಕೆ. ಸವಿತಾ ಹಾಗೂ ಹೆಚ್ಚುವರಿ ಆಯುಕ್ತರಾದ ವೀಣಾ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಗರದ ಎಲ್ಲ ವಲಯಗಳ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಮೇಲ್ವಿಚಾರಕರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಪುರುಷರು ಮತ್ತು ಮಹಿಳೆಯರಿಗಾಗಿ 100 ಮೀಟರ್ ಓಟ ಹಾಗೂ ಗುಂಡು ಎಸೆತ ಸ್ಪರ್ಧೆಗಳನ್ನು ನಡೆಸಲಾಯಿತು. ಕೆರೆ–ದಡ, ಸಂಗೀತ ಕುರ್ಚಿ, ಕೊಕ್ಕರೆ ಆಟ, ನಿಂಬೆಹಣ್ಣು–ಚಮಚ ಓಟ ಮತ್ತು ಹಗ್ಗಜಗ್ಗಾಟ ಸೇರಿದಂತೆ ವಿವಿಧ ವಿನೋದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಇದರೊಂದಿಗೆ ಕ್ರಿಕೆಟ್ ಪಂದ್ಯಾವಳಿಯನ್ನೂ ನಡೆಸಲಾಯಿತು.
ಪೌರಕಾರ್ಮಿಕರ ದೈಹಿಕ ಆರೋಗ್ಯ, ಮಾನಸಿಕ ಉಲ್ಲಾಸ, ಕ್ರೀಡಾಸ್ಫೂರ್ತಿ ಹಾಗೂ ಪರಸ್ಪರ ಒಗ್ಗಟ್ಟನ್ನು ಉತ್ತೇಜಿಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಪೌರಕಾರ್ಮಿಕರು ಎಲ್ಲ ಸ್ಪರ್ಧೆಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಭಿಯಂತರ ಮೃತ್ಯುಂಜಯ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು ಹಾಗೂ ಮಹಾನಗರ ಪಾಲಿಕೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
