ಪಬ್ಲಿಕ್ ಅಲರ್ಟ್ ನ್ಯೂಸ್:-ಮಹನೀಯರ ತ್ಯಾಗ, ಬಲಿದಾನ ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ರಮೇಶ್ ಬಂಡಿಸಿದ್ದೇಗೌಡ
- ಸೆಸ್ಕ್ ನಿಗಮ ಕಚೇರಿಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಮೈಸೂರು, ಅ.2, 2026: ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ, ಹಕ್ಕು ಮತ್ತು ಸ್ವಾಭಿಮಾನದ ಬದುಕಿನ ಹಿಂದೆ ಅಸಂಖ್ಯಾತ ಮಹನೀಯರ ತ್ಯಾಗ, ಬಲಿದಾನ ಅಡಗಿದೆ. ಅವರ ಕೊಡುಗೆಯನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಹೇಳಿದರು.
ನಗರದ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ನಿಗಮ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಸಂಘಟನೆ ಮಾಡಿ ನಾಯಕತ್ವ ವಹಿಸಿದವರು ಮಹಾತ್ಮ ಗಾಂಧೀಜಿ. ಸತ್ಯ ಮತ್ತು ಅಹಿಂಸೆಯ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದ ಅವರು, ಜಗತ್ತಿಗೆ ಮಾದರಿಯಾದರು. ಅಹಿಂಸೆಯ ಮೂಲಕ ಸ್ವಾತಂತ್ರ್ಯ ಪಡೆದ ಏಕೈಕ ದೇಶ ಭಾರತವಾಗಿದೆ” ಎಂದು ಹೇಳಿದರು.
“ಇಂದು ನಮ್ಮ ಸ್ವಾರ್ಥದ ಜೀವನದಲ್ಲಿ ನಮಗಾಗಿ ಹಾಗೂ ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಮರೆಯುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಸ್ವಾತಂತ್ರ್ಯ ನಮಗೆ ಸುಲಭವಾಗಿ ದೊರೆತದ್ದಲ್ಲ. ಅನೇಕ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ನಾವು ಇಂದು ಸ್ವತಂತ್ರವಾಗಿ ಬದುಕುತ್ತಿದ್ದೇವೆ. ಹೀಗಾಗಿ ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದರು.
“ಸಮಾಜಕ್ಕೆ ನಾವು ಕಿಂಚಿತ್ತಾದರೂ ಕೊಡುಗೆ ನೀಡುವ ಕೆಲಸ ಮಾಡಿದ್ದೇ ಆದಲ್ಲಿ ಮಹನೀಯರ ಆದರ್ಶ ಮತ್ತು ಕನಸುಗಳು ಸಾಕಾರಗೊಳ್ಳಲಿವೆ. ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದರ ಜೊತೆಗೆ ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕು. ಇದೇ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಂತಹ ಮಹನೀಯರಿಗೆ ಸಲ್ಲಿಸುವ ನಿಜವಾದ ಗೌರವ” ಎಂದು ರಮೇಶ್ ಬಂಡಿಸಿದ್ದೇಗೌಡ ಹೇಳಿದರು.
ಇದಕ್ಕೂ ಮುನ್ನ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ರಮೇಶ್ ಬಂಡಿಸಿದ್ದೇಗೌಡ ಅವರೊಂದಿಗೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಎಲ್. ಲೋಕೇಶ್, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕರಾದ(ತಾಂತ್ರಿಕ) ಶರಣಮ್ಮ ಎಸ್. ಜಂಗಿನ, ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರಾದ ಕೆ. ರೂಪಶ್ರೀ, ಆರ್. ರಾಮಸ್ವಾಮಿ, ದಿನೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
