ಪಬ್ಲಿಕ್ ಅಲರ್ಟ್ ನ್ಯೂಸ್:-ಸಂವಿಧಾನ ದಿನಾಚರಣೆ: ಧಾರ್ಮಿಕ ಸ್ವಾತಂತ್ರ್ಯ, ಹಕ್ಕುಗಳ ರಕ್ಷಣೆಗೆ ಆಗ್ರಹ
ನ.26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ; 3 ಸಾವಿರಕ್ಕೂ ಅಧಿಕ ಮಂದಿ ಭಾಗಿ ನಿರೀಕ್ಷೆ
ಮೈಸೂರು: ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಮೈಸೂರು ಧರ್ಮಕ್ಷೇತ್ರ ಹಾಗೂ ಯುನೈಟೆಡ್ ಕ್ರಿಶ್ಚಿಯನ್ ಫೋರಂ (ಯುಸಿಎಫ್) ಮೈಸೂರು ಘಟಕದ ಸಂಯುಕ್ತ ಆಶ್ರಯದಲ್ಲಿ ನ.26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಮತ್ತು ಯುಸಿಎಫ್ ಅಧ್ಯಕ್ಷ ಡಾ.ಎಸ್.ಜೆ.ಫ್ರಾನ್ಸಿಸ್ ಸೆರಾವೊ ಮಾತನಾಡಿ, 1949ರ ನ.26ರಂದು ಭಾರತದ ಸಂವಿಧಾನ ಸಭೆಯು ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥ ಪ್ರತಿವರ್ಷ ಸಂವಿಧಾನ ದಿನ ಆಚರಿಸಲಾಗುತ್ತಿದೆ. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದ ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.
ಅಂದು ಬೆ.8 ಗಂಟೆಗೆ ಸಿಎಸ್ ಐ ಯೇಸು ಕರುಣಾಲಯ ಚರ್ಚ್‌ನಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬಳಿಕ ಗಣ್ಯರ ಸಮ್ಮುಖದಲ್ಲಿ ಧ್ವಜಾರೋಹಣ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುವುದು. ಬೆಳಿಗ್ಗೆ 9 ಗಂಟೆಗೆ ಸಂತ ಫಿಲೋಮಿನಾ ಮಹಾದೇವಾಲಯದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಕ್ರೈಸ್ತ ಸಭೆ ಮತ್ತು ಸಮುದಾಯಗಳನ್ನು ಪ್ರತಿನಿಧಿಸುವ 3,000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಸಂವಿಧಾನ ತಜ್ಞ ಎಸ್. ಮೂರ್ತಿ ಹಾಗೂ ಸಂದೇಶ ನೀಡಲಿದ್ದಾರೆ. ದೇಶಭಕ್ತಿಗೀತೆಗಳು ಸೇರಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಈ ವರ್ಷದ ಸಂವಿಧಾನ ದಿನಾಚರಣೆಯಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಸಂರಕ್ಷಣೆ ಮತ್ತು ಸಂವಿಧಾನಾತ್ಮಕ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಂವಿಧಾನದ 25ನೇ ವಿಧಿಯು ಪ್ರತಿಯೊಬ್ಬ ನಾಗರಿಕನಿಗೂ ಆತ್ಮಸಾಕ್ಷಿಯ ಸ್ವಾತಂತ್ರ್ಯ ಹಾಗೂ ಧರ್ಮವನ್ನು ಸ್ವೀಕರಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ನೀಡಿದೆ. ಈ ಹಕ್ಕು ಎಲ್ಲ ಧರ್ಮದ ಜನರಿಗೂ ಸಮಾನವಾಗಿ ಅನ್ವಯಿಸುತ್ತದೆ ಎಂದರು.
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಸಂರಕ್ಷಣಾ ಕಾಯಿದೆ-2022ನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಗಿದೆ. ಕಾಯಿದೆಯ ಕೆಲವು ನಿಬಂಧನೆಗಳು ಧಾರ್ಮಿಕ ಅಲ್ಪಸಂಖ್ಯಾತರಲ್ಲಿ, ವಿಶೇಷವಾಗಿ ಕ್ರೈಸ್ತ ಸಮುದಾಯದಲ್ಲಿ ಆತಂಕ ಮತ್ತು ಅನಿಶ್ಚಿತತೆ ಮೂಡಿಸಿವೆ. ಬಲವಂತ, ವಂಚನೆ ಅಥವಾ ಬೆದರಿಕೆಯ ಮೂಲಕ ನಡೆಯುವ ಧಾರ್ಮಿಕ ಚಟುವಟಿಕೆಗಳನ್ನು ತಡೆಯಲು ಕಾನೂನು ಕ್ರಮ ಅಗತ್ಯವಿದ್ದರೂ, ಶಾಂತಿಯುತ ಧಾರ್ಮಿಕ ಪ್ರಚಾರ ಮತ್ತು ಸ್ವಯಂಪ್ರೇರಿತ ಧಾರ್ಮಿಕ ಆಯ್ಕೆಗೆ ಅಡ್ಡಿಯಾಗಬಾರದು ಎಂದು ಹೇಳಿದರು.
ಅಲ್ಲದೆ, ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ದುರ್ಬಲ ಸಮುದಾಯಗಳ ವಿರುದ್ಧ ನಡೆಯುವ ದ್ವೇಷ ಭಾಷಣ, ಕೋಮು ಪ್ರಚೋದನೆ, ಬೆದರಿಕೆ ಹಾಗೂ ಹಿಂಸಾಚಾರ ತಡೆಗೆ ಸರ್ಕಾರ ಸಮಗ್ರ ರಕ್ಷಣಾ ನೀತಿ ರೂಪಿಸಬೇಕು. ಇಂತಹ ಪ್ರಕರಣಗಳಲ್ಲಿ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ತಪ್ಪಿತಸ್ಥರ ವಿರುದ್ಧ ತ್ವರಿತ ಹಾಗೂ ನಿಷ್ಪಕ್ಷಪಾತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶಿಕ್ಷಣ, ಆರೋಗ್ಯ, ಸಾಮಾಜಿಕ ಸೇವೆ ಹಾಗೂ ಬಡವರ ಕಲ್ಯಾಣ ಕ್ಷೇತ್ರಗಳಲ್ಲಿ ಕ್ರೈಸ್ತ ಸಂಸ್ಥೆಗಳು ಸಲ್ಲಿಸುತ್ತಿರುವ ಸೇವೆಯನ್ನು ಸ್ಮರಿಸಿರುವ ಸಂಘಟಕರು, ಧಾರ್ಮಿಕ ಕಾರ್ಯಕರ್ತರು ಭಯವಿಲ್ಲದೆ ತಮ್ಮ ಸೇವೆ ಮತ್ತು ಧಾರ್ಮಿಕ ಕರ್ತವ್ಯಗಳನ್ನು ನಿರ್ವಹಿಸಲು ಸೂಕ್ತ ವಾತಾವರಣ ಕಲ್ಪಿಸಬೇಕೆಂದು ಮನವಿ ಮಾಡಿದರು.
ಧರ್ಮ, ಜಾತಿ, ಭಾಷೆ ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಗೌರವಿಸುವ ಮೂಲಕ ಪರಸ್ಪರ ಸಹಬಾಳ್ವೆ ಹಾಗೂ ರಾಷ್ಟ್ರೀಯ ಏಕತೆಯನ್ನು ಬಲಪಡಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಧರ್ಮಗಳ ಮುಖಂಡರು, ನಾಗರಿಕ ಸಮಾಜದ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಿ ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಕೈಜೋಡಿಸಬೇಕೆಂದು ಮೈಸೂರು ಧರ್ಮಕ್ಷೇತ್ರ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಮನವಿ ಮಾಡಿವೆ ಎಂದರು.
