ಸಾರ್ವಜನಿಕರ ನೋವಿಗೆ ಹಾಗೂ ಬೇಡಿಕೆಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸ್ಪಂದಿಸುತ್ತೇವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯ ಸ್ವಾಮಿ ಅವರು ತಿಳಿಸಿದರು.
ನಗರದ ಗುರುಭವನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಶಿಕ್ಷಕ ಪ್ರತಿನಿಧಿಗಳ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರವು ಯಾವುದೇ ನಿರ್ಣಯವನ್ನಾದರೂ ಕಾನೂನು ಇಲಾಖೆ ಹಾಗೂ ಸಂವಿಧಾನದ ವ್ಯಾಪ್ತಿಯಲ್ಲಿ ತೆಗೆದುಕೊಳ್ಳಬೇಕು. ಸಂವಿಧಾನ ಮೀರಿ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ, ದಯಮಾಡಿ ಬೇಡಿಕೆಗಳ ಹಿಡೇರಿಕೆಗಾಗಿ ತಾಳ್ಮೆಯಿಂದ ವರ್ತಿಸಿ ಎಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯದ ಏಳು ಕೋಟಿ ಕನ್ನಡಿಗರ ಸಮಸ್ಯೆಯನ್ನು ಹಾಲಿಸುವಲ್ಲಿ ರಾಜ್ಯ ಸರ್ಕಾರ ಎಂದಿಗೂ ಮುಂದೆಯಿರುತ್ತದೆ. ಹೋರಾಟ ಒಂದೇ ಪರಿಹಾರವಲ್ಲ , ಸರ್ಕಾರ ಏಳು ಕೋಟಿ ಕನ್ನಡಿಗರ ಪರವಾಗಿದೆ ಎಂದು ಶಿಕ್ಷಕರ ಸಮಸ್ಯೆ ಪರಿಹರಿಸುವಲ್ಲಿ ಭರವಸೆಯ ಮಾತುಗಳನ್ನ ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಿ & ಆರ್ ತಿದ್ದುಪಡಿಯ ಬಗ್ಗೆ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳು ನಿರ್ಣಯ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಮುಖ್ಯ ಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಪೋಷಕರು ಖಾಸಗಿ ಶಾಲೆಗಳ ಮೊರೆ ಹೋಗದೆ ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸುವ ಸಲುವಾಗಿ ಸರ್ಕಾರಿ ಶಾಲಾ ಶಿಕ್ಷಕರು ಜವಾಬ್ದಾರಿಯುತವಾಗಿ, ಆಕರ್ಷಕವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಎಂದು ಶಿಕ್ಷಕರಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ 2024 ಮತ್ತು 2025 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ಧೃತಿ, ಪುನೀತ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕೂ ಹೆಚ್ಚಿನ ಅಂಕ ಗಳಿಸಿ ನೀಟ್ ಪರೀಕ್ಷೆಯಲ್ಲಿ ಉತ್ತಿರ್ಣರಾದ ಚೇತನ್ ಅವರನ್ನು ಸನ್ಮಾನಿಸಲಾಯಿತು.


ನೂತನವಾಗಿ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನುಗ್ಲಿ ಹಾಗೂ ಕಾರ್ಯದರ್ಶಿಗಳಾದ ಚೇತನ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.