ಪಬ್ಲಿಕ್ ಅಲರ್ಟ್
ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಕಲಾಕೂಟದ ಸಂಯುಕ್ತಾಶ್ರಯದಲ್ಲಿ ಡಿ.ದೇವರಾಜ ಅರಸ್ ಅವರ ೧೧೦ನೇ ಜನ್ಮ ದಿನದ ಅಂಗವಾಗಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮತ್ತು ಸಂಸ್ಕೃತಿ ಚಿಂತಕ ಡಾ.ಕೆ.ರಘುರಾಮ್ ವಾಜಪೇಯಿ ಅವರಿಗೆ ಅರಸು ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿದ ಲೇಖಕ ಪ್ರೊ.ಅರವಿಂದ ಮಾಲಗತ್ತಿ ಮಾತನಾಡಿ, ಸಾಮಾಜಿಕ ವ್ಯವಸ್ಥೆಯಲ್ಲಿ ಸಾಧಕರನ್ನು ಗುರುತಿಸಿದಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ಯೋಗ್ಯರನ್ನು ಮತ್ತು ಸಮರ್ಥ ವ್ಯಕ್ತಿಗಳಿಗೆ ಗೌರವಿಸಿದಾಗ ಮಾತ್ರ. ಪ್ರಶಸ್ತಿಯ ಮೌಲ್ಯ ಹೆಚ್ಚುತ್ತದೆ. ಸರ್ಕಾರಿ ಸಂಸ್ಥೆಯಲ್ಲಿರುವವರು ಹಾಗೂ ರಾಜಕಾರಣಿಗಳು ನಿವೃತ್ತರಾದಾಗ ಅವರನ್ನು ಗೌರವಿಸಿದರೆ ಅವರ ಸಾಧನೆ ಜನತೆಗೆ ತಿಳಿಯಲು ಸಾಧ್ಯವಾಗುತ್ತದೆ.
ದೇವರಾಜ ಅರಸು ಅವರು ಭೂ ಸೂಧಾರಣೆ ಮೂಲಕ ಇಡೀ ರೈತರಿಗೆ ಭೂ ರಹಿತರಿಗೆ ಭೂಮಿ ನೀಡಿದರು. ಇದರಿಂದ ಸಾಮಾಜಿಕ ಬದಲಾವಣೆ ಸಾಧ್ಯವಾಯಿತು. ಮೈಸೂರು ರಾಜ್ಯ ಕರ್ನಾಟಕ ಮಾಡಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ಅಂತಹ ಧೀಮಂತ ನಾಯಕನ ಹೆಸರಿನಲ್ಲಿ ನೀಡುತ್ತಿರುವುದು ಉತ್ತಮ ಕಾರ್ಯ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ.ಲಿಂಗರಾಜು, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು, ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಯೋಗೇಶ್ ಉಪ್ಪಾರ್, ಮಡಿವಾಳ ಸಂಘದ ಅಧ್ಯಕ್ಷ ರವಿನಂದನ್ ಮಡಿವಾಳ, ಕುಂಬಾರರ ಸಂಘ ಎಚ್.ಎನ್.ಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.