ಪಬ್ಲಿಕ್ ಅಲರ್ಟ್
ಮೈಸೂರು: ರಾಯಲ್ ಚಾಲೆಂರ‍್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣವು ದಸರಾ ಮಹೋತ್ಸವದ ಜನದಟ್ಟಣೆ ನಿರ್ವಹಣೆಯಲ್ಲಿ ಮತ್ತಷ್ಟು ಮುತುವರ್ಜಿ ವಹಿಸುವಂತೆ ಮಾಡಿದೆ.
ಜಿಲ್ಲಾಧಿಕಾರಿ ಲಕ್ಷಿö್ಮಕಾಂತ ರೆಡ್ಡಿ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್‌ಐಪಿ) ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.
ದಸರಾ ಮಹೋತ್ಸವದ ಭಾಗವಾಗಿ ಸಂಘಟಿಸುವ ಯುವ ಸಂಭ್ರಮ, ಯುವ ದಸರಾ, ಅರಮನೆ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮಮಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕಡ್ಡಾಯವಾಗಿ ಎಸ್‌ಐಪಿ ಪಾಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ದಸರಾ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ, ಸಮಯ, ಕಾರ್ಯಕ್ರಮದ ವಿವರಗಳ ಮಾಹಿತಿಯನ್ನು ಆಗಾಗ್ಗೆ ಸಾರ್ವಜನಿಕರಿಗೆ ನೀಡಬೇಕು. ಜನಸಂದಣಿ ಆಗದಂತೆ ಅಗತ್ಯ ಸೂಚನೆಗಳನ್ನು ಸಾರ್ವಜನಿಕರಿಗೆ ನೀಡುತ್ತಿರಬೇಕು. ಜನಸಂದಣಿ ಇರುವ ಪ್ರದೇಶಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನಸಂದಣಿ ಉಂಟಾಗದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕೆಂದು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿಸಿಪಿ ಬಿಂದುಮಣಿ ಮುಂತಾದ ಅಧಿಕಾರಿಗಳಿದ್ದರು.