ಪಬ್ಲಿಕ್ ಅಲರ್ಟ್
ಮೈಸೂರು: ಭಾರತೀಯ ಶ್ರೇಷ್ಠ ಸಾಹಿತ್ಯ ಪರಂಪರೆಯಲ್ಲಿ ಕನ್ನಡದ ಘನತೆ ಮತ್ತು ಅಸ್ಮಿತೆಯನ್ನು ವರ್ಧಿಸಿದವರು ಮಹಾಕವಿ ಕುವೆಂಪು ಎಂದು ವಿಶ್ವ ಒಕ್ಕಗಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ನಿಶ್ಚಲಾನಂದ ನಾಥ ಸ್ವಾಮೀಜಿ ಬಣ್ಣಿಸಿದರು.
ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಡಿ.೧೨ ರಂದು ದೆಹಲಿಯ ಕರ್ನಾಟಕ ಭವನದಲ್ಲಿ ನಡೆಯಲಿರುವ ವಿಚಾರ ಸಂಕಿರಣ, ಪುಸ್ತಕಗಳ ಲೋಕಾರ್ಪಣೆ ಹಾಗೂ ಸಾಕ್ಷ್ಯಚಿತ್ರ ಪ್ರದರ್ಶನ ಸಮಾರಂಭದ ಹಿನ್ನೆಲೆಯಲ್ಲಿ ವಿಶ್ವಮಾನವ ಕುವೆಂಪು ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ನಗರದ ಜಲದರ್ಶಿನಿಯಲ್ಲಿ ನಡೆದ ಪೂರ್ವಾಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವೈಚಾರಿಕತೆ, ವೈಜ್ಞಾನಿಕತೆ, ಸಾಮರಸ್ಯದ ಅಂಶಗಳು ಕುವೆಂಪು ಅವರ ಸಾಹಿತ್ಯದಲ್ಲಿ ದಟ್ಟವಾಗಿವೆ. ಪ್ರಸ್ತುತ ಜಗತ್ತಿಗೆ ಈ ಮೂರು ವಿಚಾರಗಳ ಅಗತ್ಯ ತುಂಬಾ ಇದೆ. ಆದ್ದರಿಂದ ಇಡೀ ಜಗತ್ತೇ ಮೆಚ್ಚಬಹುದಾದ ವಿಚಾರ ಪರಂಪರೆಯನ್ನು ನೀಡಿದ ಶ್ರೇಷ್ಠ ಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿಯ ಮನ್ನಣೆ ದೊರೆಯಲೇಬೇಕಿದೆ. ಈಗಾಗಲೇ ರಾಜ್ಯ ಸರ್ಕಾರ ಭಾರತ ರತ್ನ ಪ್ರಶಸ್ತಿಗೆ ಕುವೆಂಪು ಹೆಸರು ಶಿಫಾರಸ್ಸು ಮಾಡಿರುವುದರಿಂದ ನಮ್ಮ ಹೋರಾಟಕ್ಕೆ ಸಿಂಹಪಾಲು ಶಕ್ತಿ ದೊರೆತಿದೆ. ಈ ಹೋರಾಟಕ್ಕೆ ಕೇಂದ್ರ ಸರ್ಕಾರ ಕೂಡ ಸ್ಪಂದಿಸುವ ಭರವಸೆ ಇದೆ. ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ದೊರೆತರೆ, ಅದು ನಿಜಕ್ಕೂ ಕನ್ನಡ ಸಂಸ್ಕೃತಿ ಮತ್ತು ಕನ್ನಡಿಗರಿಗೆ ಸಂದ ಗೌರವವಾಗುತ್ತದೆ ಎಂದು ವ್ಯಾಖ್ಯಾನಿಸಿದರು.
ವಿಶ್ವಮಾನವ ಕುವೆಂಪು ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಹೆಚ್.ಕೆ.ರಾಮು ಮಾತನಾಡಿ, ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿಗೆ ಒತ್ತಾಯಿಸುವ ದಿಕ್ಕಿನಲ್ಲಿ ಡಿ. ೧೨ ರಂದು ದೆಹಲಿಯ ಕರ್ನಾಟಕ ಸಂಘದಲ್ಲಿ ಕುವೆಂಪು ಸಾಹಿತ್ಯ ಕುರಿತು ಸಂಕಿರಣ, ತ್ರಿಭಾಷಾ ಪುಸ್ತಕಗಳ ಲೋಕಾರ್ಪಣೆ ಹಾಗೂ ಸಾಕ್ಷ್ಯ ಚಿತ್ರ ಪ್ರದರ್ಶನ ಹಮ್ಮಿಕೊಳ್ಳಲು ಸಿದ್ಧತೆ ನಡೆಯುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಅಂದು ನಡೆಯುವ ಕಾರ್ಯಕ್ರಮಕ್ಕೆ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಮೊದಲಾದ ಗಣ್ಯರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವಿಶ್ರಾಂತ ನಿರ್ದೇಶಕ ಪ್ರೊ.ಕೆ.ಟಿ. ವೀರಪ್ಪ, ವಿಶ್ರಾಂತ ಅಪರ ಜಿಲ್ಲಾಧಿಕಾರಿ ಕೆ.ಎಂ. ಚಂದ್ರೇಗೌಡ, ಸಾಹಿತಿಗಳಾದ ಡಾ.ಸಿ.ನಾಗಣ್ಣ, ಟಿ.ಸತೀಶ್ ಜವರೇಗೌಡ, ಡಾ.ಹಾಲತಿ ಸೋಮಶೇಖರ್, ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕಲಪತಿ ಡಾ.ಎನ್.ಎಸ್.ರಾಮೇಗೌಡ, ಕೃಷಿ ವಿಜ್ಞಾನಿ ಡಾ.ವಸಂತಕುಮಾರ್ ತಿಮಕಾಪುರ, ದಲಿತ ಸಾಹಿತ್ಯ ಅಕಾಡೆಮಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಸೇರಿ ಮೊದಲಾದವರು ಮಾತನಾಡಿದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಂಗದ ನಿರ್ದೇಶಕ ಡಾ.ನಂಜಯ್ಯ ಹೊಂಗನೂರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಚಂದ್ರಶೇಖರ್, ಯುವಕವಿಗಳಾದ ದೇವರಾಜ್ ಚಿಕ್ಕಹಳ್ಳಿ, ಎಸ್.ಶಿಈರಂಜನ್, ಡಾ.ಬಿ.ಬಸವರಾಜು, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಜೆ.ಜವರೇಗೌಡ, ಹೆಚ್.ಎಲ್.ಯಮುನಾ, ಸುಶೀಲಾ ನಂಜಪ್ಪ, ಮಿರ್ಲೆ ಅಣ್ಣೇಗೌಡ, ವಕೀಲ ಗಂಗಾಧರಗೌಡ ಮೊದಲಾದವರು ಉಪಸ್ಥಿತರಿದ್ದರು.
