ಪಬ್ಲಿಕ್ ಅಲರ್ಟ್ ನ್ಯೂಸ್:-ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: ಡಾ: ಯತೀಂದ್ರ ಸಿದ್ದರಾಮಯ್ಯ
ಮೈಸೂರು, ಏ.15(ಕರ್ನಾಟಕ ವಾರ್ತೆ):-
ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ವಿಧಾನಪರಿಷತ್ ಶಾಸಕ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು, ಅಧಿಕಾರಿಗಳು ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿರುತ್ತೀರಿ, ಈ ಗ್ರಾಮಗಳಿಗೆ ನಿಗದಿತವಾಗಿ ಭೇಟಿ ನೀಡಿ ಕುಡಿಯುವ ನೀರಿನ ಸ್ಥಿತಿ ಗರಿಗಳನ್ನು ತಿಳಿದುಕೊಂಡು ಅಗತ್ಯ ವ್ಯವಶ್ಥೆ ಮಾಡಿ ಎಂದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲನೆ ನಡೆಸಿ, ಯಾವುದಾದರೂ ತೊಂದರೆ ಇದ್ದಲ್ಲಿ ಸರಿಪಡಿಸಿಕೊಳ್ಳಿ, ಖಾಸಗಿ ಬೋರ್ ವೆಲ್ ಗಳ ಪಟ್ಟಿ ಹಾಗೂ ಟ್ಯಾಂಕರಗಳ ಮೂಲಕ ನೀರು ಸರಬರಾಜು ಮಾಡಬೇಕಿರುವ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ಯೋಜನೆ ರೂಪಿಸಿಕೊಳ್ಳಿ ಎಂದರು.
ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಅಥವಾ ಯಾವುದೇ ತೊಂದರೆ ಇದ್ದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಮೊದಲ ಆದ್ಯತೆ ನೀಡಿ ಪರಿಹರಿಸಬೇಕು ಎಂದರು.
ಸಭೆಯ ನಂತರ ಸಾರ್ವಜನಿಕರು, ಸ್ಮಶಾನಕ್ಕೆ ಸ್ಥಳ, ಹಕ್ಕು ಪತ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸಮಸ್ಯೆಗಳ ಬಗ್ಗೆ ಕುಂದು ಕೊರತೆಗಳನ್ನು ಸಲ್ಲಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
