ಕಾನೂನು ಪಾಲನೆಯಷ್ಟೇ ಅಲ್ಲ, ಮಾನವೀಯ ಮೌಲ್ಯಗಳೊಂದಿಗೆ ಕರ್ತವ್ಯ ನಿರ್ವಹಿಸಿ: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ

latha prabhukumar
5 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಕಾನೂನು ಪಾಲನೆಯಷ್ಟೇ ಅಲ್ಲ, ಮಾನವೀಯ ಮೌಲ್ಯಗಳೊಂದಿಗೆ ಕರ್ತವ್ಯ ನಿರ್ವಹಿಸಿ: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ

ಮೈಸೂರು ಅಕ್ಟೋಬರ್ 30 (ಕರ್ನಾಟಕ ವಾರ್ತೆ ) ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕೇವಲ ಕಾನೂನು ಹಾಗೂ ಸೇವಾ ನಿಯಮಗಳ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುವುದಕ್ಕೆ ಸೀಮಿತವಾಗದೆ, ಪ್ರಾಮಾಣಿಕತೆ, ನಿಷ್ಠೆ, ಸಮಯಪಾಲನೆ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲೋಕಾಯುಕ್ತ ಸಂಸ್ಥೆ ಸ್ಥಾಪನೆಯಾಗಿ ಸುಮಾರು ನಾಲ್ಕು ದಶಕಗಳು ಕಳೆದಿದ್ದರೂ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ. ಇಂದಿಗೂ ಭ್ರಷ್ಟಾಚಾರ ಸಮಾಜದಲ್ಲಿ ಮುಂದುವರಿದಿರುವುದು ಕಳವಳಕಾರಿ ಸಂಗತಿಯಾಗಿದೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಎಂಬುದು ಆತಂಕಕಾರಿ ಸಂಗತಿ. ಈ ಪರಿಸ್ಥಿತಿಯಿಂದ ಹೊರಬರಲು ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಹೆಚ್ಚಾಗಬೇಕು. ಭ್ರಷ್ಟಾಚಾರವನ್ನು ತಡೆಗಟ್ಟುವುದು, ಸಾರ್ವಜನಿಕರ ನೆಮ್ಮದಿ ಕಾಪಾಡುವುದು ಹಾಗೂ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಪ್ರತಿವರ್ಷ ಅಕ್ಟೋಬರ್ ಕೊನೆಯ ವಾರದಿಂದ ನವೆಂಬರ್ ಮೊದಲ ವಾರದವರೆಗೆ ಜಾಗೃತಿ ಅರಿವು ಸಪ್ತಾಹವನ್ನು ಆಚರಿಸಲಾಗುತ್ತದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವಾದ ಅಕ್ಟೋಬರ್ 31ರಂದು ಅವರ ಪ್ರಾಮಾಣಿಕತೆ, ನಿಷ್ಠೆ ಮತ್ತು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಈ ವರ್ಷದ ಜಾಗೃತಿ ಸಪ್ತಾಹದ ಧ್ಯೇಯವಾಕ್ಯ ‘ಸಮೃದ್ಧಿಗಾಗಿ ಪ್ರಾಮಾಣಿಕತೆ’ ಎಂಬುದಾಗಿದೆ. ಪ್ರಾಮಾಣಿಕತೆ ಎಂದರೆ ಕೇವಲ ವೈಯಕ್ತಿಕ ನಿಷ್ಠೆಯಲ್ಲ. ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಶ್ರದ್ಧೆಯಿಂದ ನಿರ್ವಹಿಸುವುದೂ ಪ್ರಾಮಾಣಿಕತೆಯ ಭಾಗವಾಗಿದೆ ಎಂದು ಹೇಳಿದರು.

ಪ್ರಾಮಾಣಿಕತೆ, ನಿಷ್ಠೆ ಮತ್ತು ಸಮಯಪಾಲನೆ ಉತ್ತಮ ಆಡಳಿತ ವ್ಯವಸ್ಥೆಯ ಪ್ರಮುಖ ಮೌಲ್ಯಗಳಾಗಿವೆ. ಕಚೇರಿಗೆ ನಿಗದಿತ ಸಮಯಕ್ಕೆ ಬಂದು ನಿಗದಿತ ಸಮಯದವರೆಗೆ ಕೆಲಸ ಮಾಡುವುದಷ್ಟೇ ಸಮಯಪಾಲನೆಯಲ್ಲ. ನಮಗೆ ವಹಿಸಿರುವ ಜವಾಬ್ದಾರಿಯನ್ನು ಅರಿತು, ಅಗತ್ಯವಿದ್ದಾಗ ಹೆಚ್ಚುವರಿ ಸಮಯವನ್ನೂ ಕೆಲಸಕ್ಕಾಗಿ ಮೀಸಲಿಟ್ಟು ಕರ್ತವ್ಯ ಪೂರ್ಣಗೊಳಿಸುವುದು ನಿಜವಾದ ಮೌಲ್ಯಾಧಾರಿತ ಸಮಯಪಾಲನೆಯಾಗಿದೆ ಎಂದರು.

ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಹಲವು ಹೆಚ್ಚುವರಿ ಜವಾಬ್ದಾರಿಗಳಿರುತ್ತವೆ. ಸಚಿವರು, ಮುಖ್ಯಮಂತ್ರಿಗಳು ಹಾಗೂ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಫ್ಲೆಕ್ಸಿ ಟೈಮ್ ವ್ಯವಸ್ಥೆಯಡಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಬೇಕು. ತುರ್ತು ಕಡತಗಳ ವಿಲೇವಾರಿ ಮತ್ತು ಸಾರ್ವಜನಿಕರ ಕೆಲಸಗಳಿಗೆ ಆದ್ಯತೆ ನೀಡುವ ಅಧಿಕಾರಿಗಳು ರಾತ್ರಿ 9 ಅಥವಾ 10 ಗಂಟೆಯವರೆಗೂ ಕಾರ್ಯನಿರ್ವಹಿಸುವ ಉದಾಹರಣೆಗಳಿವೆ. ತಾವು ಜಿಲ್ಲಾ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೂ ಅಂಕಿ ಅಂಶಗಳ ಮಾಹಿತಿ ಕಳುಹಿಸುವ ಸಲುವಾಗಿ ರಾತ್ರಿ 10 ಗಂಟೆಯವರೆಗೂ ಸಿಬ್ಬಂದಿಯೊಂದಿಗೆ ಕೆಲಸ ಮಾಡಿರುವುದನ್ನು ಸ್ಮರಿಸಿದರು.

ಕೆಲಸದ ಅವಧಿಯನ್ನು ಕೇವಲ ಗಡಿಯಾರದ ಸಮಯಕ್ಕೆ ಸೀಮಿತಗೊಳಿಸದೆ, ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕೆಲಸದ ಪ್ರಮಾಣ, ಅದರ ಮಹತ್ವ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಬೇಕು. ಕೆಲಸದಲ್ಲಿ ವಸ್ತುನಿಷ್ಠತೆ, ಪ್ರಾಮಾಣಿಕತೆ ಮತ್ತು ಬದ್ಧತೆ ಇರಬೇಕು ಎಂದು ತಿಳಿಸಿದರು.

ಲೋಕಾಯುಕ್ತ ಸಂಸ್ಥೆಯ ಕಾರ್ಯನಿರ್ವಹಣೆಯನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, ಹಿಂದೆ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಅವುಗಳ ವಿಲೇವಾರಿಗೆ ನಿರ್ದಿಷ್ಟ ಸಮಯ ಬೇಕಾಗುತ್ತಿತ್ತು. ಪ್ರಸ್ತುತ ಒಂದು ವರ್ಷದಲ್ಲಿ ಸುಮಾರು 30 ಸಾವಿರ ಪ್ರಕರಣಗಳು ಬಂದಿದ್ದು, ಅವುಗಳಲ್ಲಿ ಸುಮಾರು 22 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಾದರೂ ದಿನದ 24 ಗಂಟೆಗಳ ಅವಧಿ ಬದಲಾಗಿಲ್ಲ. ಲಭ್ಯವಿರುವ ಸಮಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದರು.

ಸಮಯಪಾಲನೆ ಎಂದರೆ ಕೇವಲ ಕಾನೂನಿನ ಚೌಕಟ್ಟಿನಲ್ಲಿ ನಿಗದಿಪಡಿಸಿದ ಸಮಯಕ್ಕೆ ಹಾಜರಾಗುವುದಲ್ಲ. ನಮಗೆ ವಹಿಸಿರುವ ಕೆಲಸವನ್ನು ಯಾವ ಸಮಯದಲ್ಲಿ, ಯಾವ ರೀತಿಯಲ್ಲಿ ಮತ್ತು ಎಷ್ಟು ಪರಿಣಾಮಕಾರಿಯಾಗಿ ಪೂರ್ಣಗೊಳಿಸಬೇಕು ಎಂಬ ಉದ್ದೇಶ ಸ್ಪಷ್ಟವಾಗಿರಬೇಕು. ಕೆಲಸದಲ್ಲಿ ವಸ್ತುನಿಷ್ಠತೆ, ಪ್ರಾಮಾಣಿಕತೆ ಮತ್ತು ಬದ್ಧತೆ ಇರಬೇಕು. ಈ ಗುಣಗಳನ್ನು ವ್ಯವಸ್ಥಿತವಾಗಿ ಅಳವಡಿಸಿಕೊಂಡಾಗ ಮಾತ್ರ ಮೌಲ್ಯಾಧಾರಿತ ಆಡಳಿತ ಸಾಧ್ಯವಾಗುತ್ತದೆ ಎಂದು ಹೇಳಿದರು.

ಭಾರತದ ಸಂವಿಧಾನವು ಎಲ್ಲರಿಗೂ ಸಮಪಾಲು, ಸಮಬಾಳು ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ಮಹತ್ತರ ಆಶಯ ಹೊಂದಿದೆ. ಸಮಾಜದ ಪ್ರತಿಯೊಬ್ಬರಿಗೂ ಉತ್ತಮ ಜೀವನ ಒದಗಿಸುವುದು ಸಂವಿಧಾನದ ಮೂಲ ಉದ್ದೇಶವಾಗಿದೆ. ಈ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರಗಳು ವಿವಿಧ ಕಾನೂನುಗಳನ್ನು ರೂಪಿಸಿ, ಇಲಾಖೆಗಳ ಮೂಲಕ ಜವಾಬ್ದಾರಿಗಳನ್ನು ಹಂಚಿಕೆ ಮಾಡಿವೆ.

ವ್ಯಕ್ತಿಯು ಜನಿಸಿದ ನಂತರ ಜೀವನದ ಕೊನೆಯವರೆಗೂ ಆತನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವುದು ಸರ್ಕಾರದ ನೈತಿಕ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯನ್ನು ಆರೋಗ್ಯ ಇಲಾಖೆ ನಿರ್ವಹಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣ ಪಡೆಯುವ, ತನಗೆ ಇಷ್ಟವಾದ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ, ಆಸ್ತಿ-ಪಾಸ್ತಿಗಳನ್ನು ಸಂಪಾದಿಸುವ, ರಕ್ಷಿಸಿಕೊಳ್ಳುವ ಹಾಗೂ ಕಾನೂನಿನ ಪ್ರಕಾರ ಅನುಭವಿಸುವ ಹಕ್ಕುಗಳಿವೆ. ಇಂತಹ ಹಕ್ಕುಗಳಿಗೆ ಕಾನೂನು ರಕ್ಷಣೆ ಒದಗಿಸುತ್ತದೆ ಎಂದರು.

ದೇಶದ ಗಡಿಗಳನ್ನು ಸೈನಿಕರು ರಕ್ಷಿಸುವಂತೆ, ದೇಶದ ಆಂತರಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮಹತ್ವದ ಕಾರ್ಯವನ್ನು ಪೊಲೀಸ್ ಇಲಾಖೆ ನಿರ್ವಹಿಸುತ್ತದೆ. ಸಮಾಜದಲ್ಲಿನ ಸಂಘರ್ಷಗಳನ್ನು ನಿಯಂತ್ರಿಸುವುದು, ಜನರ ಜೀವ ಮತ್ತು ಆಸ್ತಿಗೆ ರಕ್ಷಣೆ ನೀಡುವುದು ಹಾಗೂ ನಾಗರಿಕರ ಹಕ್ಕುಬಾಧ್ಯತೆಗಳನ್ನು ಸಂರಕ್ಷಿಸುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯವಾಗಿದೆ. ಅದೇ ರೀತಿ ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳು ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಇಂತಹ ಮಹತ್ವದ ಮತ್ತು ಪವಿತ್ರ ಜವಾಬ್ದಾರಿಗಳನ್ನು ನಿರ್ವಹಿಸುವ ಇಲಾಖೆಗಳಲ್ಲಿರುವ ಅಧಿಕಾರಿಗಳು ಹಾಗೂ ನೌಕರರು ತಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕತೆ ಮತ್ತು ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು. ಲಂಚ ಸ್ವೀಕರಿಸದಿರುವುದು ಮತ್ತು ಲಂಚ ನೀಡದಿರುವುದು ಮಾತ್ರ ಪ್ರಾಮಾಣಿಕತೆಯ ಸಂಪೂರ್ಣ ಅರ್ಥವಲ್ಲ. ನಿಗದಿತ ಸಮಯಕ್ಕೆ ಕಚೇರಿಗೆ ಬಂದು ಕೆಲಸ ನಿರ್ವಹಿಸುವುದಷ್ಟೇ ಕರ್ತವ್ಯವೂ ಅಲ್ಲ. ಇವುಗಳಿಗಿಂತ ಮಿಗಿಲಾಗಿ ಮಾನವೀಯ ಮೌಲ್ಯಗಳು ನಮ್ಮಲ್ಲಿರಬೇಕು. ಅವುಗಳನ್ನು ನಮ್ಮ ದೈನಂದಿನ ಕೆಲಸ ಮತ್ತು ಸಾರ್ವಜನಿಕ ಸೇವೆಯೊಂದಿಗೆ ಬೆಸೆಯಬೇಕು ಎಂದು ಹೇಳಿದರು.

ಪ್ರಸ್ತುತ ಅನೇಕರು ಕೆಸಿಎಸ್ಆರ್ ಸೇರಿದಂತೆ ಸೇವಾ ನಿಯಮಗಳ ಚೌಕಟ್ಟಿನೊಳಗೆ ಮಾತ್ರ ತಮ್ಮ ಕರ್ತವ್ಯವನ್ನು ಸೀಮಿತಗೊಳಿಸಿಕೊಳ್ಳುತ್ತಿದ್ದಾರೆ. ಕಾನೂನು ಮತ್ತು ನಿಯಮಗಳು ಎಷ್ಟು ಹೇಳುತ್ತವೆಯೋ ಅಷ್ಟನ್ನೇ ಪಾಲಿಸುವ ಮನೋಭಾವದಿಂದ ಹೊರಬರಬೇಕು. ಕಾನೂನಿನ ಪಾಲನೆಯ ಜೊತೆಗೆ ಮಾನವೀಯ ಗುಣಗಳು, ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಕಾಳಜಿ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸನ್ನಡತೆ ಮತ್ತು ಪ್ರಾಮಾಣಿಕತೆ ಪರಸ್ಪರ ಬೇರ್ಪಡಿಸಲಾಗದ ಮೌಲ್ಯಗಳಾಗಿವೆ ಎಂದರು.

ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಮೌಲ್ಯಾಧಾರಿತ ಜೀವನ ನಡೆಸಬೇಕು. ಇದು ವೈಯಕ್ತಿಕ ಜೀವನಕ್ಕೆ ಮಾತ್ರವಲ್ಲದೆ ಸಮಾಜ ಮತ್ತು ಆಡಳಿತ ವ್ಯವಸ್ಥೆಯ ಸುಧಾರಣೆಗೂ ಸಹಕಾರಿಯಾಗುತ್ತದೆ. ನಾವು ಬದುಕಿರುವಾಗ ಮಾತ್ರವಲ್ಲದೆ, ನಮ್ಮ ನಂತರವೂ ಜನರು ನಮ್ಮ ಒಳ್ಳೆಯ ಕೆಲಸಗಳನ್ನು ಸ್ಮರಿಸುವಂತಹ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮಹಾತ್ಮ ಗಾಂಧೀಜಿಯವರ ಆಶಯಗಳನ್ನು ಉಲ್ಲೇಖಿಸಿದ ಅವರು, ಭಾರತದ ಸ್ವಾತಂತ್ರ್ಯ ಹಾಗೂ ಭಾರತೀಯರನ್ನು ಶೋಷಣೆ, ದಬ್ಬಾಳಿಕೆ ಮತ್ತು ತಾರತಮ್ಯದಿಂದ ಮುಕ್ತಗೊಳಿಸುವುದು ಗಾಂಧೀಜಿಯವರ ಪ್ರಮುಖ ಕನಸುಗಳಾಗಿದ್ದವು. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಆಡಳಿತ ವ್ಯವಸ್ಥೆ ನಿರ್ಮಾಣವಾಗಬೇಕು. ಪ್ರತಿಯೊಬ್ಬ ಸರ್ಕಾರಿ ನೌಕರರೂ ಮೌಲ್ಯಾಧಾರಿತ ಜೀವನ ಮತ್ತು ಕರ್ತವ್ಯನಿಷ್ಠೆಯನ್ನು ಅಳವಡಿಸಿಕೊಂಡಾಗ ಮಾತ್ರ ಭ್ರಷ್ಟಾಚಾರ ಮುಕ್ತ ಹಾಗೂ ಸಮೃದ್ಧ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್ ಯುಕೇಶ್ ಕುಮಾರ್, ಮೈಸೂರು ಜಿಲ್ಲಾ ಲೋಕಾಯುಕ್ತ ಅಧೀಕ್ಷಕರಾದ ಟಿ ಜೆ ಉದೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment