ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಸಾಧನೆ ಮಾಡಿ: ತನ್ವೀರ್‌ಸೇಠ್‌

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು,ಸೆ.10-  ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವತ್ತ ಮೈಸೂರಿನ ಕ್ರೀಡಾಪಟುಗಳು ಗಮನ ಹರಿಸಬೇಕು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದರು. 
ಮೈಸೂರಿನ ನಜ಼ರ್‌ಬಾದ್‌ನಲ್ಲಿರುವ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೈಸೂರಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದ್ದು, ಕ್ರೀಡಾಪಟುಗಳಿಗೆ ತರಬೇತಿ ಪಡೆಯುವುದಕ್ಕೆ ಕ್ರೀಡಾಂಗಣ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ. ಪ್ರತಿದಿನ ವಿವಿಧ ಮೈದಾನದಲ್ಲಿ ಕ್ರೀಡಾಪಟುಗಳು ತರಬೇತಿ ಪಡೆಯುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ತವಕದಲ್ಲಿರುವುದು ಶ್ಲಾಘನೀಯ ಎಂದರು.
ನಾಡಹಬ್ಬ ದಸರಾ ಮಹೋತ್ಸವದ ಸಂದರ್ಭದಲ್ಲಿ ಪ್ರತಿವರ್ಷವೂ ದಸರಾ ಕ್ರೀಡಾಕೂಟ ಆಯೋಜಿಸಲಾಗುತ್ತಿದ್ದು, ಸಾವಿರಾರು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಅದರಲ್ಲೂ ತಾಲೂಕು, ಜಿಲ್ಲಾಮಟ್ಟದಲ್ಲಿ ಕ್ರೀಡಾಕೂಟ ನೆರವೇರಿದ ಬಳಿಕ ರಾಜ್ಯಮಟ್ಟದ ಕ್ರೀಡಾಕೂಟ ಜರುಗಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು. ಯಾವುದೇ ಕ್ರೀಡಾ ಚಟುವಟಿಕೆಗಳಲ್ಲೂ ಸ್ಪರ್ಧೆ ಇದ್ದೇ ಇರುತ್ತದೆ. ಸೋಲು-ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವಿಕೆ ಮುಖ್ಯ. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ನಡೆಯುತ್ತಿರುವ ವಿವಿಧ ಕ್ರೀಡೆಗಳಲ್ಲಿ ಗೆಲುವು ಸಾಧಿಸುವ ಗುರಿಯೊಂದಿಗೆ ಪಾಲ್ಗೊಳ್ಳಬೇಕು. ಆರೋಗ್ಯಕರ ಸ್ಪರ್ಧೆ ಇರಬೇಕು. ಆ ಮೂಲಕ ರಾಜ್ಯ ಕ್ರೀಡಾಕೂಟಕ್ಕೆ ಆಯ್ಕೆಯಾಗಬೇಕು ಎಂದು ಸಲಹೆ ನೀಡಿದರು.
೧೫೦೦ಕ್ಕೂ ಹೆಚ್ಚು ಮಂದಿ ಭಾಗಿ: ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೈಸೂರು ಜಿಲ್ಲೆಯ ವಿವಿಧ ತಾಲೂಕಿನಿಂದ ೧೫೦೦ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಬ್ಯಾಸ್ಕೆಟ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್,  ಥ್ರೋಬಾಲ್, ಯೋಗ, ಈಜು, ಟೆನ್ನಿಸ್, ನೆಟ್‌ಬಾಲ್ ಸೇರಿದಂತೆ ವಿವಿಧ ಕ್ರೀಡಾಸ್ಪರ್ಧೆ ಜರುಗಲಿದೆ. ಚಾಮುಂಡಿವಿಹಾರ ಕ್ರೀಡಾಂಗಣ, ಮೈಸೂರು ವಿಶ್ವವಿದ್ಯಾನಿಲಯದ ಒಳಾಂಗಣ ಸೇರಿದಂತೆ ವಿವಿಧೆಡೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಜರುಗುತ್ತಿವೆ. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.

Share This Article
Leave a Comment