ಇಂಥಾ ಬೆದರಿಕೆಗೆ ನಾನೂ, ಖರ್ಗೆಯೂ ಹೆದರುವುದಿಲ್ಲ: ಸಿ.ಎಂ

Pratheek
1 Min Read

ಪಬ್ಲಿಕ್ ಅಲರ್ಟ್


ಮೈಸೂರು: ಇಂಥಾ ಯಾವುದೇ ಬೆದರಿಕೆ ಕರೆಗಳಿಗೆ ನಾನು ಹೆದರುವುದಿಲ್ಲ, ಪ್ರಿಯಾಂಕ ಖರ್ಗೆಯವರು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ  ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡಿನಲ್ಲಿ ಆರ್.ಎಸ್.ಎಸ್. ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು. ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು.
ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ ಅವರು ಹೆದರುವುದಿಲ್ಲವೆಂದರು.
ಎಲ್ಲರಿಗೂ ಅನುದಾನ: ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ  ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿ ಜೆಡಿಎಸ್ ನವರು   ನಮ್ಮ ಶಾಸಕರಿಗೆ  ಅನುದಾನ ನೀಡಿದ್ದರೇ?, ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ. ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ನಗರ ಬಿಟ್ಟರೆ  ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದರು. ಬಿಜೆಪಿಯವರು ತಾಕತ್ತಿದ್ದರೆ ಆರ್.ಎಸ್.ಎಸ್. ಮೇಲೆ ನಿಷೇಧ  ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು  ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ ಸೋತು ಹೋದರು ಎಂದು ತಿಳಿಸಿದರು.

Share This Article
Leave a Comment